ಮಂಗಳೂರು: ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿಯಾಗಿರುವ ರೆಮೋನಾ ಅವರ ಭರತನಾಟ್ಯ ಪ್ರದರ್ಶನ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ.
ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್ ನಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ.


ಸತತ 127 ಗಂಟೆ ಭರತನಾಟ್ಯ ಪ್ರದರ್ಶನ ನೀಡಿದ್ದೇ ಈವರೆಗಿನ ದಾಖಲೆಯಾಗಿತ್ತು.ಇದೀಗ 170 ಗಂಟೆ ಸತತ ಪ್ರದರ್ಶನ ನೀಡುವ ಮೂಲಕ ರೆಮೋನಾ ಪಿರೇರಾ ವಿಶ್ವಮಟ್ಟದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ.
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಗಾಗಿ ರೆಮೋನಾ ಪಿರೇರಾ ನಿರಂತರ ಭರತನಾಟ್ಯ ಮಾಡುತ್ತಿದ್ದಾಗ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆ್ಯಂಬುಲೆನ್ಸ್ ಒಳಗೊಂಡ ತಂಡವೂ ಸ್ಥಳದಲ್ಲಿ ಹಾಜರಿತ್ತು.ಪ್ರತಿ ಬಾರಿ 3 ಗಂಟೆಗೊಮ್ಮೆ ವಿಶ್ರಾಂತಿ ಪಡೆಯುತ್ತಿದ್ದಾಗ ವೈದ್ಯರು ಆರೋಗ್ಯ ತಪಾಸಣೆ ಮಾಡುತ್ತಿದ್ದರು. ಒಟ್ಟು ಏಳು ದಿನಗಳ ಅವಧಿಯಲ್ಲಿ ರೆಮೋನಾ ಪಿರೇರಾ ಭರತನಾಟ್ಯದ ವಿವಿಧ ಪ್ರಕಾರಗಳ ಪ್ರದರ್ಶನ ಮಾಡಿ ತೋರಿಸಿದ್ದಾರೆ.

ಅದಕ್ಕೆ ತಕ್ಕಂತೆ ರೆಕಾರ್ಡೆಡ್ ಹಾಡುಗಳನ್ನು ಬಳಕೆ ಮಾಡಲಾಗಿತ್ತು. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿಗಳ ಸಮ್ಮುಖದಲ್ಲಿಯೇ ರೆಮೋನಾ ಭರತನಾಟ್ಯ ಪ್ರದರ್ಶಿಸಿದ್ದಾರೆ. ಏಳು ದಿನಗಳ ಪ್ರದರ್ಶನವನ್ನು ಕ್ಯಾಮರಾದ ಮೂಲಕ ರೆಕಾರ್ಡ್ ಮಾಡಲಾಗಿದ್ದು, ಅಧಿಕಾರಿಗಳು ರೆಮೋನಾ ಸಾಧನೆಯನ್ನು ಸಂಪೂರ್ಣವಾಗಿ ದಾಖಲೀಕರಣ ಮಾಡಿಕೊಂಡಿದ್ದಾರೆ.


