Breaking
23 Mar 2026, Mon

ಹೈಕೋರ್ಟ್ ಆದೇಶದ ನಡುವೆಯೂ ಸಾರಿಗೆ ನೌಕರರ ಮುಷ್ಕರ: ಕೆಲವು ಕಡೆ ರಸ್ತೆಗಿಳಿಯದ ಬಸ್

ಬೆಂಗಳೂರು: ಹೈಕೋರ್ಟ್ ಆದೇಶದ ನಡುವೆಯೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಇಂದು ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ಇವತ್ತು ರಾಜ್ಯದ ಕೆಲವು ಭಾಗಗಳಲ್ಲಿ ಸಾರ್ವಜನಿಕರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಯಿತು.

ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್ ಗಳು ಸಂಚಾರ ಮಾಡಿದ್ರೆ, ಇನ್ನೂ ಕೆಲವೆಡೆ ಬಸ್ ಗಳು ಸಂಚಾರ ಮಾಡುತ್ತಿಲ್ಲ. ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ.

ಇತ್ತ ಬೆಂಗಳೂರಿನಲ್ಲಿ ಸಾರಿಗೆ ಮುಷ್ಕರದಿಂದಾಗಿ ಬಿಎಂಟಿಸಿ ಬಸ್ ಗಳ ಸಂಚಾರ ಭಾಗಶಃ ಸ್ಥಗಿತವಾಗಿದೆ. ಹೀಗಾಗಿ, ಬೆಂಗಳೂರು ಒಂದರಲ್ಲೇ 4 ಸಾವಿರ ಖಾಸಗಿ ಬಸ್ ಗಳನ್ನು ನೀಡುವಂತೆ ಖಾಸಗಿ ಬಸ್ ಮಾಲೀಕರ ಸಂಘಕ್ಕೆ ಸಾರಿಗೆ ಆಯುಕ್ತರು ಬೇಡಿಕೆ ಇಟ್ಟಿದ್ದಾರೆ.

ರಾಜ್ಯಾದ್ಯಂತ 11 ಸಾವಿರ ಬಸ್ ಕೇಳಿದ್ದಾರೆ. ಆದರೆ, ಇನ್ನೂ ಅಂತಿಮಗೊಳಿಸಿಲ್ಲ ಎಂದು ಖಾಸಗಿ ಬಸ್ ಮಾಲೀಕರ ಸಂಘದ ನಟರಾಜ್ ಶರ್ಮಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಬುಧವಾರಕ್ಕೆ ಬಸ್ ನೀಡುವಂತೆ ಕೋರಿದ್ದಾರೆ ಎಂದಿರುವುದು ಹೊಸ ಗೊಂದಲ ಸೃಷ್ಟಿಸಿದೆ.

ಈ ಮಧ್ಯೆ, ಸರ್ಕಾರದ ಸೂಚನೆ ದೊರೆಯುತ್ತಿದ್ದಂತೆಯೇ ಜಿಲ್ಲೆಗಳ ಸಾರಿಗೆ ನಿಗಮದ ಮುಖ್ಯಸ್ಥರು ಪ್ರತ್ಯೇಕ ವ್ಯವಸ್ಥೆಗಳನ್ನ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರ್ಕಾರಿ ಬಸ್ಗಳನ್ನೇ ಇಳಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ಹೊಸದಾಗಿ ಸೇರಿದ 85 ಸಿಬ್ಬಂದಿಯನ್ನು ಬಳಸಿ ಚಾಲನೆ ಮಾಡಲು, ಖಾಸಗಿಯಾಗಿ ನೇಮಕವಾದ 100 ಸಿಬ್ಬಂದಿ ಬಳಸಲ ತೀರ್ಮಾನಿಸಲಾಗಿದೆ. ಖಾಸಗಿ ಬಸ್ ಮತ್ತು ಖಾಸಗಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಒಂದೆಡೆ ಹಲವು ಜಿಲ್ಲೆಗಳಲ್ಲಿ ಮುಷ್ಕರ ಎದುರಿಸಲು ಅಧಿಕಾರಿಗಳು ಸಿದ್ಧವಾಗಿದ್ದರೆ ಮತ್ತಷ್ಟು ಜಿಲ್ಲೆಗಳಲ್ಲಿ ಕಾದು ನೋಡಲು ಮುಂದಾಗಿದ್ದಾರೆ.

ಬಳ್ಳಾರಿಯಲ್ಲಿ ಸಿಬ್ಬಂದಿ ಕೆಲಸಕ್ಕೆ ಬರುತ್ತೇವೆ ಎಂದಿದ್ದಾರೆ ಎನ್ನಲಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಪ್ರತಿಭಟನೆಯ ಸುಳಿವು ಇದೆ. ಹೀಗಾಗಿ, ಧಾರವಾಡ, ಮೈಸೂರು, ವಿಜಯಪುರ, ಕೊಪ್ಪಳ, ದಕ್ಷಿಣ ಕನ್ನಡ, ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ.

Leave a Reply

Your email address will not be published. Required fields are marked *