ಬೆಂಗಳೂರು: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಯುವತಿಯೋವ೯ಳು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೂದಿಗೆರೆ ಕ್ರಾಸ್ ಬಳಿ ನಡೆದಿದೆ.
ತನುಶ್ರೀ (22) ಮೃತ ದುರ್ದೈವಿ. ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಬೂದಿಗೆರೆ ಕ್ರಾಸ್ ಬಳಿ ರಸ್ತೆಯು ಗುಂಡಿ ಬಿದ್ದು ಸಂಪೂರ್ಣ ಹಾಳಾಗಿದ್ದು, ಅದೇ ಮಾರ್ಗವಾಗಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ತನುಶ್ರೀ, ರಸ್ತೆ ಗುಂಡಿ ತಪ್ಪಿಸಲು ಬಲ ಬದಿಗೆ ವಾಹನ ಚಾಲನೆ ಮಾಡಿದ್ದಾರೆ.

ಅದೇ ವೇಳೆಗೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್, ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ತನುಶ್ರೀ ಮೇಲೆ ಟಿಪ್ಪರ್ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬೂದಿಗೆರೆ ಸುತ್ತಮುತ್ತಲಿನ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ರಸ್ತೆಗಳು ಗುಂಡಿ ಬಿದ್ದಿದ್ದು, ಪ್ರತಿನಿತ್ಯ ಅಪಘಾತ ಸಂಭವಿಸುತ್ತಿವೆ. ಆದರೂ ರಸ್ತೆ ಗುಂಡಿಗಳನ್ನು ಮುಚ್ಚಿಲ್ಲ, ವಿದ್ಯಾರ್ಥಿನಿ ತನುಶ್ರೀ ಸಾವಿಗೆ ರಸ್ತೆ ಗುಂಡಿಗಳೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



