ಮಂಗಳೂರು: ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಹಾಕಿ ಆನ್‌ಲೈನ್‌ನಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ರಾಮಕುಂಜ ಗ್ರಾಮದ ಬೀಜತ್ತಳಿ ನಿವಾಸಿ ಸೈಯದ್ ಇಬ್ರಾಹಿಂ ತಂಙಳ್ (55) ಎಂದು ಗುರುತಿಸಲಾಗಿದೆ.
ಭಾರತ ಸರ್ಕಾರವು 2022 ರಲ್ಲಿ ಪಿಎಫ್‌ಐ ಅನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿ ನಿಷೇಧಿಸಿತ್ತು. ನಿಷೇಧದ ಹೊರತಾಗಿಯೂ, ಆರೋಪಿಯು ಸಂಘಟನೆಯ ಪರ ಪ್ರಚಾರ ನಡೆಸಿ ಸಾರ್ವಜನಿಕ ಶಾಂತಿ ಕದಡಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಹೀಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಆರೋಪಿಯನ್ನು ಮಂಗಳೂರಿನ ಉರ್ವ ಸ್ಟೋರ್ಸ್ ಬಳಿ ಬಂಧಿಸಿ, ಆತನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ನಂತರ 49ನೇ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಬೆಂಗಳೂರಿನ ಎನ್‌ಐಎ ಪ್ರಕರಣಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅಕ್ಟೋಬರ್ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.



