ಉಡುಪಿ: ನ. 28 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಗೀತಾ ಜಯಂತಿ ಯ ಹಿನ್ನೆಲೆ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ”ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವ” ಎಂಬ ದೊಡ್ಡ ಮಟ್ಟದ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವ ಬಗ್ಗೆ ಪ್ರಧಾನಿ ಕಚೇರಿ ದೃಢಪಡಿಸಿದ್ದು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ಕಾರ್ಯಕ್ರಮದಲ್ಲಿ ಭಕ್ತರು ಮತ್ತು ಗಣ್ಯರು ಬೃಹತ್ ಪ್ರಮಾಣದಲ್ಲಿ ಸೇರುವ ನಿರೀಕ್ಷೆ ಇದೆ.





