ಮೈಸೂರು: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹೊಸಳ್ಳಿ ಗೇಟ್ ಬಳಿ ನಡೆದಿದೆ.

ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಚಾಲಕ ಬಸ್ಸನ್ನು ಹೊಸಳ್ಳಿ ಗೇಟ್ ಬಳಿ ನಿಲ್ಲಿಸಿದ್ದಾರೆ. ಬಳಿಕ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಯಾಣಿಕರನ್ನು ಇಳಿಸಿದ ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿ, ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ದೊಡ್ಡ ಅನಾಹುತ ತಪ್ಪಿದಂತಾಗಿದೆ.



