Breaking
23 Mar 2026, Mon

ಖಾಸಗಿ ಸ್ಲೀಪರ್‌ ಕೋಚ್ ಬಸ್‌ ಗೆ ಲಾರಿ ಡಿಕ್ಕಿ: 6 ಕ್ಕೂ ಹೆಚ್ಚು ಮಂದಿ ಸಜೀವ ದಹನ

ಚಿತ್ರದುರ್ಗ: ಲಾರಿಯೊಂದು ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದು 6ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಡಿ. 25 ರಂದು ನಡೆದಿದೆ.

ಲಾರಿ ಹಿರಿಯೂರಿನಿಂದ ಬೆಂಗಳೂರಿನ ಕಡೆಗೆ ತೆರಳುತ್ತಿದ್ದು , ಬಸ್ ಬೆಂಗಳೂರಿನಿಂದ ಶಿವಮೊಗ್ಗದತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ಬಳಿಕ ಬಸ್ ರಸ್ತೆ ಮಧ್ಯೆಯಲ್ಲೇ ಬೆಂಕಿಗಾಹುತಿಯಾಗಿದ್ದು ಬೆಂಕಿ ವೇಗವಾಗಿ ವ್ಯಾಪಿಸಿದ ಕಾರಣ ಬಸ್‌ ನೊಳಗಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, 32 ಆಸನಗಳ ಸಾಮರ್ಥ್ಯದ ಬಸ್‌ನಲ್ಲಿ 29 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇವರಲ್ಲಿ 15 ಮಹಿಳೆಯರು ಮತ್ತು 14 ಪುರುಷರಿದ್ದರು. ಹೆಚ್ಚಿನ ಪ್ರಯಾಣಿಕರು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮೂಲದವರಾಗಿದ್ದು, ಉಳಿದವರು ಕುಮಟಾ ಮತ್ತು ಶಿವಮೊಗ್ಗದವರು ಎಂದು ತಿಳಿದುಬಂದಿದೆ. ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಕೆಲವರು ಸಮಯಪ್ರಜ್ಞೆಯಿಂದ ಬಸ್‌ನಿಂದ ಹೊರ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಕಂಟೇನರ್ ಲಾರಿ ಚಾಲಕ ಕುಲದೀಪ್ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *