ಉಡುಪಿ: ದ್ವಿ ಚಕ್ರ ವಾಹನವನ್ನು ಕಳವು ಮಾಡಿದ್ದ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಓಂ ಕೋಲಾರ ಎಂದು ಗುರುತಿಸಲಾಗಿದೆ.

ಡಿ. 5 ರಂದು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದ ವಾಹನ ಕಳವಾದ ಬಗ್ಗೆ ಮಹಿಳೆಯೋರ್ವರು ಶಿರ್ವ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಬಳಿಕ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಿ ಉಡುಪಿ, ಮಲ್ಪೆ ಕಾರ್ಕಳ, ಧರ್ಮಸ್ಥಳ ಕಡೆಗಳಲ್ಲಿ ಶೋಧ ಕಾರ್ಯ ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ವಿಚಾರಣೆ ವೇಳೆ ಆರೋಪಿಯಿಂದ ಶಿರ್ವ, ಕಾಪು, ಬೆಂಗಳೂರು ನಗರದಲ್ಲಿನ ಪೊಲೀಸ್ ಠಾಣೆಗಳಿಗೆ ಸಂಬಂಧಿಸಿದ ಒಟ್ಟು ಐದು ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.




