ಸುಳ್ಯ: ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕಕ್ಕೆ ಕರೆದುಕೊಂಡು ಹೋಗಿ ಕಿರುಕುಳ ನೀಡಿದ ಬಳಿಕ ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41), ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ ಎಸ್ ಯಾನೆ ಮನು (42) ಎಂದು ಗುರುತಿಸಲಾಗಿದೆ.

2025ರ ಅ. 16 ರಂದು ಮಧ್ಯಾಹ್ನದ ವೇಳೆ ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿ ಕಳುಹಿಸಿದ್ದಾರೆ ಎಂದು ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಅಬ್ದುಲ್ ಜಬ್ಬಾರ್ ಅವರ ಹೆಂಡತಿ ಸುಮಯ್ಯಾ (35) ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಳಿಕ 2025 ರ ಅ.17 ರಂದು ಅಬ್ದುಲ್ ಜಬ್ಬಾರ್ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅ. 18 ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.




