ಕುಂದಾಪುರ: ಹಂಗಳೂರು ಯೂನಿಟಿ ಹಾಲ್ ಬಳಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು(ಡಿ.7) ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಆಲೂರಿನವರಾದ ಪ್ರಸ್ತುತ ಕೋಟೇಶ್ವರದ ಅಂಕದಕಟ್ಟೆ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಕೃಷ್ಣ ಮೂರ್ತಿ ಅಡಿಗ (57) ಎಂದು ಗುರುತಿಸಲಾಗಿದೆ.

ಕೃಷ್ಣ ಮೂರ್ತಿ ಅಡಿಗ ಅವರು ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಲು ಕೋಟೇಶ್ವರ ಕಡೆಗೆ ತೆರಳುತ್ತಿದ್ದ ವೇಳೆ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ತಮ್ಮ ದ್ವಿಚಕ್ರ ವಾಹನವನ್ನು ತಿರುಗಿಸಿದಾಗ ಕೋಟೇಶ್ವರ ಕಡೆಗೆ ತೆರಳುತ್ತಿದ್ದ ಮರಳು ತುಂಬಿದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.





