ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ ಸುಟ್ಟು ಕರಕಲಾಗಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದಲ್ಲಿನ ಇಂದು(ಜ. 6) ನಡೆದಿದೆ.

ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಹಿನ್ನಲೆಯಲ್ಲಿ ಬಸ್ ನಿಧಾನವಾಗಿ ಚಲಿಸುತ್ತಿದ್ದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಡಿಕ್ಕಿಯ ಬಳಿಕ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಈ ಘಟನೆಯಲ್ಲಿ ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.





