ಸುಳ್ಯ: ಸ್ಕೂಟರ್ ಸವಾರರೊಬ್ಬರು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಪೆರಾಜೆಯ ಕುಕ್ಕುಂಬಳದ ಬಳಿ ನಡೆದಿದೆ.
ಗಾಯಾಳುವನ್ನು ಅಂಜಿಕ್ಕಾರ್ ಸುಂದರ ನಾಯ್ಕ ಎಂಬವರ ಪುತ್ರ ರವಿಚಂದ್ರ ನಾಯ್ಕ ಎಂದು ಗುರುತಿಸಲಾಗಿದೆ.

ಸುಳ್ಯದಿಂದ ಮನೆಗೆ ಹಿಂತಿರುಗುತ್ತಿದ್ದಾಗ ರಾತ್ರಿ ವೇಳೆ ಈ ಅಪಘಾತ ಸಂಭವಿಸಿದೆ.
ಈ ಹಿಂದೆಯೂ ಇದೇ ಸ್ಥಳದಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿತ್ತು. ಸೇತುವೆಗೆ ಯಾವುದೇ ಸುರಕ್ಷಿತ ತಡೆಗೋಡೆ ಅಥವಾ ಬ್ಯಾರಿಕೇಡ್‌ಗಳಿಲ್ಲದಿರುವುದೇ ಇಂತಹ ಸರಣಿ ಅಪಘಾತಗಳಿಗೆ ಮುಖ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಡೆಗೋಡೆ ನಿರ್ಮಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.








