ಉಡುಪಿ: ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಯೋರ್ವ ಕಾರು ಚಲಾಯಿಸಿ ರಸ್ತೆ ಬದಿ ನಿಲ್ಲಿಸಿದ ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಭಿಮನ್ಯು ನೇಗಿ ಎಂದು ಗುರುತಿಸಲಾಗಿದೆ.

ಫೆ. 14ರ ತಡರಾತ್ರಿ ರಸ್ತೆ ಬದಿಯಲ್ಲಿ ಸಾಲಾಗಿ ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಇದೇ ವೇಳೆ ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೂ ಕಾರು ಢಿಕ್ಕಿಯಾಗಿದೆ.
ಅಪಘಾತದಲ್ಲಿ ರಿಕ್ಷಾ ಚಾಲಕ ಬಡಗಬೆಟ್ಟು ನಿವಾಸಿ ಶಿವಪ್ರಸಾದ್ (76) ಅವರ ತಲೆಗೆ ಗಂಭೀರವಾಗಿ ಗಾಯವಾಗಿದ್ದು ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಬದಿಯ ಮಳಿಗೆಗಳ ಸಿಬ್ಬಂದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






