Breaking
12 Mar 2026, Thu

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಸಜೆ

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೋಕ್ಸೊ-ಎಫ್ ಟಿ ಎಸ್ ಸಿ 2) ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು 20 ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

ಉಳ್ಳಾಲದ ಅಬೂಬಕರ್ (53) ಶಿಕ್ಷೆಗೆ ಒಳಗಾದ ಅಪರಾಧಿ.

2025ರ ಮಾ.29ರಂದು ನೆರೆಮನೆಯ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ, ಅಬೂಬಕರ್ ಆಕೆಯನ್ನು ನಿರ್ಜನ ಮನೆಯೊಂದರ ಬಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಆರೋಪಿ ಇದಕ್ಕೂ ಮೊದಲು 3 ಬಾರಿ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಶಿವಕುಮಾರ್ ಬಿ. ಅವರು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಮಂಗಳವಾರದಂದು ಶಿಕ್ಷೆ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 15 ದಿನ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

ಸಂತ್ರಸ್ತೆಗೆ ದಂಡದ ಮೊತ್ತವಾದ 50,000 ರೂ. ಹಾಗೂ ಪ್ರತ್ಯೇಕವಾಗಿ 3.50 ಲ.ರೂ.ಗಳನ್ನು ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೋಕ್ಸೋ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.

Leave a Reply

Your email address will not be published. Required fields are marked *