ಬಂಟ್ವಾಳ: ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮೆರಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶಕೀಲ್ ಪಿ (43) ಎಂದು ಗುರುತಿಸಲಾಗಿದೆ.
ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಈತನ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಇದೀಗ ಆರೋಪಿಯನ್ನು ಕೇರಳದ ತಿರೂರ್‌ನಲ್ಲಿ ಪತ್ತೆ ಹಚ್ಚಿದ ಬಂಟ್ವಾಳ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಳಿಕ ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.






