Breaking
16 May 2026, Sat

ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಇಬ್ಬರು ಆರೋಪಿಗಳ ಬಂಧನ

ಮೂಡುಬಿದಿರೆ: ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹಂಡೇಲಿನ ಮಹಮ್ಮದ್ ಆರೀಫ್ ಹಾಗೂ ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಎಂದು ಗುರುತಿಸಲಾಗಿದೆ.

ಪಿಎಸ್ಐ ಕೃಷ್ಣಪ್ಪ ಮತ್ತು ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ, ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿತು. ತಕ್ಷಣ ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ವಾಹನ ತಪಾಸಣೆ ಆರಂಭಿಸಲಾಯಿತು.

ಈ ವೇಳೆ ಅನುಮಾನಾಸ್ಪದವಾಗಿ ಬಂದ ಕಾರನ್ನು ಪೊಲೀಸರು ನಿಲ್ಲಿಸಲು ಸೂಚಿಸಿದರೂ ಆರೋಪಿಗಳು ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದರು. ಬಳಿಕ ಪೊಲೀಸರು ಬೆನ್ನಟ್ಟಿ ವಾಹನವನ್ನು ತಡೆದು ಆರೋಪಿಗಳನ್ನು ವಶಕ್ಕೆ ಪಡೆದರು.

ಪರಾರಿಯಾಗಲು ಯತ್ನಿಸಿದ ಆರೋಪಿಗಳು ಗುಂಡುಕಲ್ಲು 5 ಸೆಂಟ್ಸ್ ರಸ್ತೆಯ ಸಾಹುಲ್ ಹಮೀದ್ ಎಂಬವರ ಮನೆ ಕಂಪೌಂಡ್ ಒಳಗೆ ವಾಹನ ನುಗ್ಗಿಸಿದ್ದರು. ಆದರೆ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿದರು.

ಕಾರನ್ನು ತಪಾಸಣೆ ನಡೆಸಿದಾಗ, ಕರುವೊಂದನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಪತ್ತೆಯಾಯಿತು.

ಪೊಲೀಸರ ಮಾಹಿತಿ ಪ್ರಕಾರ, ಮಹಮ್ಮದ್ ಆರೀಫ್ ವಿರುದ್ಧ ಈಗಾಗಲೇ ಬಜಪೆ, ಬಣಕಲ್ ಹಾಗೂ ಮೂಡುಬಿದಿರೆ ಪೊಲೀಸ್ ಠಾಣೆಗಳಲ್ಲಿ ಜಾನುವಾರು ಹತ್ಯೆ ತಡೆ ಕಾಯ್ದೆ ಸೇರಿದಂತೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಮತ್ತೊಬ್ಬ ಆರೋಪಿ ಇಮ್ರಾನ್ ಅಲಿಯಾಸ್ ಇಬ್ರಾಹಿಂ ವಿರುದ್ಧ ಮೂಡುಬಿದಿರೆ ಹಾಗೂ ಕಾರ್ಕಳ ನಗರ ಠಾಣೆಗಳಲ್ಲಿ ಎನ್‌ಡಿಪಿಎಸ್, ಕೆಪಿ ಆಕ್ಟ್ ಹಾಗೂ ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದಂತೆ ಐದಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *