ಬೆಳ್ತಂಗಡಿ: ತಾಲೂಕಿನ ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂದು ಗುರುತಿಸಲಾಗಿದೆ.

ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮತ್ತು ಮೂವರು ಯುವಕರು ಮೇ 20ರಂದು ದಿಡುಪೆ ಜಲಪಾತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಯುವಕರು ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದರೆಂದು ಆರೋಪಿಸಲಾಗಿದೆ.

ಯುವತಿಯರು ಪ್ರತಿರೋಧಿಸಿ ಸಹಾಯಕ್ಕಾಗಿ ಕೂಗಿದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಮಧ್ಯಪ್ರವೇಶಿಸಿ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೂವರು ಯುವಕರನ್ನು ವಶಕ್ಕೆ ಪಡೆದಿದ್ದು, ಯುವತಿಯರನ್ನು ರಕ್ಷಿಸಿದ್ದಾರೆ. ಆರೋಪಿಗಳು ಬಳಸಿದ್ದ ಸ್ವಿಫ್ಟ್ ಕಾರನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


