ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಅಶೋಕ್ ಕುಮಾರ್ ರೈ ಅವರು ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ, ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದ ಕಾನೂನು ಹಾಗೂ ಸರ್ಕಾರದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.

ಸಮುದಾಯ ಆರೋಗ್ಯ ಕೇಂದ್ರ ವಿಟ್ಲದ ವೈದ್ಯಾಧಿಕಾರಿಗಳಾದ ಡಾ. ಶಮನ್ ಜೆ. ಶೆಟ್ಟಿ ಅವರು ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು, ಕ್ಯಾನ್ಸರ್ ಸೇರಿದಂತೆ ವಿವಿಧ ಮಾರಕ ಕಾಯಿಲೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ತಂಬಾಕು ಸೇವನೆಗೆ ಒಳಗಾಗಿರುವ ಕನಿಷ್ಠ ಒಬ್ಬ ವ್ಯಕ್ತಿಯನ್ನು ತಂಬಾಕು ತ್ಯಜಿಸಲು ಪ್ರೇರೇಪಿಸುವ ಮೂಲಕ ಸಮಾಜದಲ್ಲಿ ಆರೋಗ್ಯಕರ ಬದಲಾವಣೆಗೆ ಕಾರಣರಾಗಬೇಕು ಎಂದು ಕರೆ ನೀಡಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಮತಿ ಕುಸುಮ ಅವರು ತಂಬಾಕು ಸೇವನೆಯನ್ನು ನಿಲ್ಲಿಸಿದ ನಂತರ ಮಾನವ ದೇಹವು ಹೇಗೆ ಹಂತಹಂತವಾಗಿ ತನ್ನ ಸಹಜ ಸ್ಥಿತಿಗೆ ಮರಳುತ್ತದೆ ಎಂಬುದನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಶ್ರೀಮತಿ ಜ್ಯೋತಿ ಹಾಗೂ ಸಮುದಾಯ ಆರೋಗ್ಯಾಧಿಕಾರಿಗಳಾದ ಶ್ರೀಮತಿ ಚೈತ್ರ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತಂಬಾಕು ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.


