ಬಂಟ್ವಾಳ: ಕಲ್ಲಡ್ಕದಿಂದ ಮಾಣಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಪ್ರದೇಶದಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಮೃತ ಬಾಲಕಿಯನ್ನು ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಅವರ ಪುತ್ರಿ ನೈರುತಿ ಎಂ. ಸುವರ್ಣ (10) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೇಮಂತ್ ಕುಮಾರ್ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಸೂರಿಕುಮೇರು ಬಳಿ ಅವರ ಬೈಕ್‌ಗೆ ಸ್ಕೂಟರ್ ಡಿಕ್ಕಿಯಾಗಿದೆ.

ಅಪಘಾತದ ತೀವ್ರತೆಗೆ ಬಾಲಕಿ ನೈರುತಿ ರಸ್ತೆ ಮೇಲೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದಳು. ಕೂಡಲೇ ಆಕೆಯನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ನೈರುತಿ ಸ್ಥಳೀಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ವಿದ್ಯಾಭ್ಯಾಸದ ಜೊತೆಗೆ ಭಜನಾ ತರಬೇತಿ ಪಡೆಯುತ್ತಿದ್ದ ಪ್ರತಿಭಾವಂತ ಬಾಲಕಿಯಾಗಿದ್ದಳು. ಉತ್ತಮ ಭಜನಾಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದ ಆಕೆಯ ಅಕಾಲಿಕ ನಿಧನ ಕುಟುಂಬಸ್ಥರು, ಶಿಕ್ಷಕರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ಮೂಡಿಸಿದೆ.
ಈ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.


