ಕಲ್ಲಡ್ಕ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವೀರಕಂಭ ಗ್ರಾಮ ವಲಯ ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಎಂ. ಅವರು, “ಪ್ರಕೃತಿ ಇದ್ದರೆ ನಾವು, ಪ್ರಕೃತಿ ಮುನಿದರೆ ಸಾವು” ಎಂಬ ಮಾತಿನಂತೆ ಪರಿಸರವೇ ನಮ್ಮ ಜೀವನದ ಆಧಾರವಾಗಿದೆ. ಗಾಳಿ, ನೀರು, ಮಣ್ಣು, ಮರಗಳು, ಪ್ರಾಣಿ-ಪಕ್ಷಿಗಳು ಹಾಗೂ ಮಾನವರು ಪರಿಸರದ ಅವಿಭಾಜ್ಯ ಅಂಗಗಳಾಗಿದ್ದು, ಅರಣ್ಯ ನಾಶ, ಮಾಲಿನ್ಯ ಹಾಗೂ ಜಾಗತಿಕ ತಾಪಮಾನ ಏರಿಕೆಯಿಂದ ಪರಿಸರಕ್ಕೆ ಗಂಭೀರ ಹಾನಿಯಾಗುತ್ತಿದೆ. ಇದರಿಂದ ಹವಾಮಾನ ಬದಲಾವಣೆ, ನೀರಿನ ಕೊರತೆ ಹಾಗೂ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ. ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆಯ ಜವಾಬ್ದಾರಿ ವಹಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಅವರು ಶಾಲಾ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯವಾಗಿದೆ. ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವುದು, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಹಾಗೂ ಮಕ್ಕಳು ತಮ್ಮ ತಾಯಿಯೊಂದಿಗೆ ಗಿಡ ನೆಟ್ಟು ಪೋಷಿಸುವ ಅಭಿಯಾನವನ್ನು ಹಮ್ಮಿಕೊಳ್ಳುವ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿನಿ ಕೀರ್ತಿಕಾ ಪರಿಸರ ಜಾಗೃತಿ ಮತ್ತು ಸಂರಕ್ಷಣೆಯ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ಎಸ್‌ಡಿಎಂಸಿ ಅಧ್ಯಕ್ಷ ಕೊರಗಪ್ಪ ನಾಯ್ಕ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಭಟ್ ರಾಕೋಡ್, ವಿದ್ಯಾರ್ಥಿ ಸಂಘದ ಸಂಘಟನಾ ಕಾರ್ಯದರ್ಶಿ ಚಿನ್ನಾ ಮೈರಾ, ಪೋಷಕ ಯತೀಶ್ ಮೈರಾ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕ ಇಂದು ಶೇಖರ್ ವಂದಿಸಿದರು. ಹಿರಿಯ ಶಿಕ್ಷಕಿ ಸಂಗೀತ ಶರ್ಮಾ ಪಿ.ಜಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.


