ಶಿವಮೊಗ್ಗ: ಟೀ ಕುಡಿಯಲು ಹೋಗಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಭದ್ರಾವತಿಯಲ್ಲಿ ಸೋಮವಾರ ನಡೆದಿದೆ.
ಭದ್ರಾವತಿ ನಗರದ ಅನ್ವರ್ ಕಾಲೋನಿಯಲ್ಲಿ ನಡೆದ ಘಟನೆಯಲ್ಲಿ ವಿಶ್ವ ಅಲಿಯಾಸ್ ಮುದ್ದೆ (35) ಗಂಭೀರವಾಗಿ ಗಾಯಗೊಂಡಿದ್ದಾರೆ. ಹಳದಮ್ಮ ಬೀದಿಯ ನಿವಾಸಿಯಾಗಿರುವ ವಿಶ್ವ ಟೀ ಕುಡಿಯಲು ತೆರಳಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ.

ದಾಳಿಯಲ್ಲಿ ವಿಶ್ವ ಅವರ ಎರಡೂ ಕೈಗಳಿಗೆ ತೀವ್ರ ಗಾಯಗಳಾಗಿದ್ದು, ಕುತ್ತಿಗೆ ಭಾಗಕ್ಕೂ ಹರಿತವಾದ ಆಯುಧದಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುವನ್ನು ತಕ್ಷಣ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.




