ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಿಲ್ಲವ, ಶೆಟ್ಟಿ ಹಾಗೂ ಬಂಟ್ಸ್ ಸಮುದಾಯಗಳ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ಒಳಗೊಂಡ ವಿಡಿಯೋ ಹಾಗೂ ಪೋಸ್ಟ್ ಪ್ರಕಟಿಸಿರುವ ಆರೋಪದ ಹಿನ್ನೆಲೆಯಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿರುವೆರ್ ಕುಡ್ಲ (ರಿ.) ಮಂಗಳೂರು ಘಟಕದ ಅಧ್ಯಕ್ಷ ರಾಕೇಶ್ (38) ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, “Anitha Kasargod” ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಪ್ರಕಟಗೊಂಡಿರುವ ವಿಡಿಯೋದಲ್ಲಿ ಕೆಲವು ಸಮುದಾಯಗಳ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ, ಧರ್ಮ ಹಾಗೂ ಜಾತಿಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ದೂರಿನಲ್ಲಿ ಉಲ್ಲೇಖಿಸಿರುವಂತೆ, ಇಂತಹ ಪೋಸ್ಟ್‌ಗಳು ಮತ್ತು ವಿಡಿಯೋಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದ್ದು, ಸಂಬಂಧಪಟ್ಟ ಖಾತೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






