ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ಒಟ್ಟು ₹23,67,000 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳದ ಕೊಳ್ನಾಡು ನಿವಾಸಿಗಳಾದ ಹಮೀದ್ ಹಾಗೂ ಜಾಬೀರ್ ಅಲಿಯಾಸ್ ಜಾಬೀ (38) ಬಂಧಿತ ಆರೋಪಿಗಳಾಗಿದ್ದಾರೆ.
ಏಪ್ರಿಲ್ 5ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಮೇ 15ರಂದು ಹಮೀದ್‌ನನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದರು. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಹಮೀದ್‌ನ ವಿಚಾರಣೆಯ ವೇಳೆ ದೊರೆತ ಮಾಹಿತಿಯ ಆಧಾರದ ಮೇಲೆ ಜೂನ್ 7ರಂದು ಜಾಬೀರ್ ಅಲಿಯಾಸ್ ಜಾಬೀ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಈ ವೇಳೆ ಪುಂಜಾಲಕಟ್ಟೆ ಠಾಣೆಯ ಅ.ಕ್ರ. 38/2026 ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ, ₹2 ಲಕ್ಷ ನಗದು ಹಾಗೂ ಉಪ್ಪಿನಂಗಡಿ ಠಾಣೆಯ ಅ.ಕ್ರ. 28/2025 ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹23,67,000 ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಉಪ್ಪಿನಂಗಡಿ, ಬಂಟ್ವಾಳ ನಗರ ಹಾಗೂ ಬೆಳ್ತಂಗಡಿ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಒಳಗೊಂಡಂತೆ ಒಟ್ಟು ಐದು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ ಸಿಪಿಐಗಳಾದ ರವಿ ಬಿ.ಎಸ್., ನಾಗರಾಜ್ ಹೆಚ್.ಇ., ಪಿಎಸ್‌ಐ ರಾಜೇಶ್ ಕೆ.ವಿ. ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಅಧಿಕಾರಿಗಳ ತಂಡ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.





