ಮಂಗಳೂರು: ಡ್ರಗ್ಸ್ ಪ್ರಕರಣವೊಂದರಲ್ಲಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಉಪ್ಪಳದ ಪಚ್ಚಿಲಾಂಬರ್ ಮಂಜೀಲ್ ನಿವಾಸಿ ಫಜಲ್ (31) ಬಂಧಿತ ಆರೋಪಿ. ಈತ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಎನ್‌ಡಿಪಿಎಸ್ (NDPS) ಕಾಯ್ದೆಯ ಪ್ರಕರಣದ ಆರೋಪಿಯಾಗಿದ್ದನು.

ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಫಜಲ್ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದರ ಹಿನ್ನೆಲೆ ಪೊಲೀಸರು ಜೂನ್ 9ರಂದು ಉಪ್ಪಳದಲ್ಲಿರುವ ಆತನ ಮನೆಯಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಳಿಕ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.







