ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 10 ರಂದು ನಿರಂತರವಾಗಿ 12 ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಅಪರೂಪದ ಸಾಧನೆ ಮಾಡಿದ್ದು, ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ದೀರ್ಘಾವಧಿಯ ದಾಖಲೆಯನ್ನು ಸರಿಗಟ್ಟಿದ್ದಾರೆ.

2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ನರೇಂದ್ರ ಮೋದಿ ಅವರು ಅಂದಿನಿಂದ ನಿರಂತರವಾಗಿ ದೇಶದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಮೂಲಕ ನೆಹರೂ ಅವರ 4,398 ದಿನಗಳ ನಿರಂತರ ಅಧಿಕಾರಾವಧಿಯನ್ನು ಮೀರಿ 4,399 ದಿನಗಳನ್ನು ಪೂರ್ಣಗೊಳಿಸಿ ಹೊಸ ಮೈಲಿಗಲ್ಲು ನಿರ್ಮಿಸಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಸುದೀರ್ಘ ಅವಧಿಯವರೆಗೆ ನಿರಂತರವಾಗಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ನಾಯಕರಲ್ಲಿ ಮೋದಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಕಳೆದ ಮೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಗೆಲುವು ಸಾಧಿಸಿದ ಹಿನ್ನೆಲೆ ಅವರು ನಿರಂತರವಾಗಿ ಅಧಿಕಾರದಲ್ಲಿದ್ದಾರೆ.

ಇದೇ ವೇಳೆ ಎನ್‌ಡಿಎ ಸರ್ಕಾರವೂ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸುತ್ತಿದ್ದು, ಪ್ರಧಾನಿ ಮೋದಿ ಅವರ ಈ ಸಾಧನೆಯನ್ನು ಗುರುತಿಸಿ ಎನ್‌ಡಿಎ ನಾಯಕರು ಇಂದು ಸಂಭ್ರಮಾಚರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಮೋದಿ ಅವರ ಆಡಳಿತಾವಧಿ ದೇಶದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಅಧ್ಯಾಯವಾಗಿ ದಾಖಲಾಗಿದ್ದು, ಈ ಸಾಧನೆ ರಾಷ್ಟ್ರೀಯ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.





