Breaking
12 Jun 2026, Fri

ವೀರಕಂಭ ಮಜಿ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ

ಕಲ್ಲಡ್ಕ: ಬಾಲಕಾರ್ಮಿಕ ಪದ್ಧತಿಯು ಸಮಾಜವನ್ನು ಅನಿಷ್ಠವಾಗಿ ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದ್ದು, ಇದರ ಕುರಿತು ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದು ಹಾಗೂ ಇದರ ಬಗ್ಗೆ ತಿಳುವಳಿಕೆ ಹೊಂದುವಂತೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಈ ಪದ್ಧತಿಯು ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದಲ್ಲದೆ ದೇಶದ ಪ್ರಗತಿಗೂ ಅಡ್ಡಿ ಉಂಟುಮಾಡುತ್ತದೆ ಎಂದು ಶಿಕ್ಷಕ ತೌಸೀಫ್ ಅಹ್ಮದ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಜಿ ವೀರಕಂಭದಲ್ಲಿ ಜೂನ್ 12 ಶುಕ್ರವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದರು.

ಮಕ್ಕಳನ್ನು ದುಡಿಮೆಗೆ ತಳ್ಳುವ ಬದಲು ಅವರಿಗೆ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಮನೆಗಳಲ್ಲಿ ,ಕಾರ್ಖಾನೆ, ಅಂಗಡಿ ಅಥವಾ ಇನ್ನಾವುದೇ ಸ್ಥಳಗಳಲ್ಲಿ ಬಾಲಕಾರ್ಮಿಕರು ಕಂಡುಬಂದಲ್ಲಿ ಅವರ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳಲು ನಾವೆಲ್ಲರೂ ಶ್ರಮಿಸಬೇಕು ಎಂಬುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಾಲಕಾರ್ಮಿಕ ವಿರೋಧಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಬೆನಡಿಕ್ಟ್ ಆಗ್ನೇಸ್ ಮಂಡೋನ್ಸ, ಶಿಕ್ಷಕ ವೃಂದ, ಶಾಲಾ ನಾಯಕ ಮೊಹಮ್ಮದ್ ಹಾರೂನ್ ಫರ್ಹಾನ್, ಶಾಲಾ ಮಂತ್ರಿಮಂಡಲದ ಸದಸ್ಯರು ಹಾಗೂ ವಿವಿಧ ಸಂಘಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ಸ್ವಾಗತಿಸಿದರು. ಶಿಕ್ಷಕಿ ಸಂಪ್ರಿಯ ವಂದಿಸಿದರು. ಹಿರಿಯ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *