Breaking
15 Jun 2026, Mon

ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್ – ಯುವಕನಿಗೆ ಗಂಭೀರ ಗಾಯ

ಹಾಸನ: ನಗರದ ಚನ್ನಪಟ್ಟಣದಲ್ಲಿರುವ ಸಾರಿಗೆ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ನಡೆದ ಅಪಘಾತದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಗೊಂಡ ಯುವಕನನ್ನು ಚಿಕ್ಕಮಗಳೂರು ಮೂಲದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಅವರನ್ನು ತಕ್ಷಣ ಹಾಸನದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್‌ಗೆ ನುಗ್ಗಿದೆ. ಈ ವೇಳೆ ಅಲ್ಲೇ ಕುಳಿತು ಬಸ್‌ಗಾಗಿ ಕಾಯುತ್ತಿದ್ದ ಮಂಜುನಾಥ್ ಅವರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪ್ರಯಾಣಿಕರು ಹಾಗೂ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಘಟನೆಯನ್ನು ಕಂಡ ಪ್ರತ್ಯಕ್ಷದರ್ಶಿಗಳು ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಅವಘಡಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಹಾಸನ ಬಡಾವಣೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *