ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ ಹಾಗೂ ಕನ್ನಡ ಸೇವಾ ಕ್ಷೇತ್ರಗಳಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಹಿರಿಯ ಸಾಹಿತಿ ಡಾ. ವಾಮನ್ ರಾವ್ ಬೇಕಲ್ ಹಾಗೂ ಶಿಕ್ಷಣ ತಜ್ಞೆ ಶ್ರೀಮತಿ ಸಂಧ್ಯಾರಾಣಿ ಟೀಚರ್ ಅವರಿಗೆ ಪ್ರತಿಷ್ಠಿತ ‘ಆಯುರ್ಭಟ ರಾಜ್ಯ ಪ್ರಶಸ್ತಿ-2026’ ಪ್ರದಾನ ಮಾಡಲಾಗುತ್ತಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 21ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತ್ಯಾಸಕ್ತರು, ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.

ಕನ್ನಡ ನಾಡು-ನುಡಿ, ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಇಬ್ಬರೂ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಗೌರವಿಸಲಾಗುವುದು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಶ್ರಮಿಸುತ್ತಿರುವ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಆಯುರ್ಭಟ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


