ಕುಂದಾಪುರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಮಾರ್ಚ್ 18ರಂದು ರಾತ್ರಿ ಕುಂದಾಪುರದ ಸಂಗಮ ಜಂಕ್ಷನ್ ಸಮೀಪದ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ₹10,000 ನಗದು ಕಳವು ಮಾಡಿದ್ದರು. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ದಿನ ಕುಂದಾಪುರದ ವಿನಯ್ ಆಸ್ಪತ್ರೆ ಸಮೀಪ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಕಳವಾಗಿರುವ ಕುರಿತು ಮತ್ತೊಂದು ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯ ವಿಳಾಸವನ್ನು ಪತ್ತೆಹಚ್ಚಿ ಗುಜರಾತ್ ರಾಜ್ಯದ ಅಮ್ರೇಲಿ ಜಿಲ್ಲೆಯ ಸಾವರ್ ಕುಂಡ್ಲ ಪ್ರದೇಶಕ್ಕೆ ತೆರಳಿದ್ದರು. ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ ಆತ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನೆಲೆಸಿರುವ ಮಾಹಿತಿ ದೊರೆತಿದೆ.
ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಮುರುಡೇಶ್ವರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಆರೋಪಿಯು ಕುಂದಾಪುರದಲ್ಲಿ ಮನೆಗಳ್ಳತನ ಹಾಗೂ ದ್ವಿಚಕ್ರ ವಾಹನ ಕಳ್ಳತನ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಂಧಿತ ಆರೋಪಿಯಿಂದ ಕಳುವಾಗಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಂದಾಪುರ ಡಿವೈಎಸ್‌ಪಿ ಹೆಚ್.ಡಿ. ಕುಲಕರ್ಣಿ ಹಾಗೂ ಪೊಲೀಸ್ ಠಾಣೆಯ ನಿರೀಕ್ಷಕ ಜಯರಾಮ್ ಡಿ. ಗೌಡ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಪಿಎಸ್‌ಐಗಳಾದ ನಂಜಾನಾಯ್ಕ್ ಎನ್. ಮತ್ತು ಪುಷ್ಪ ಸೇರಿದಂತೆ ಸಿಬ್ಬಂದಿಗಳಾದ ಮೋಹನ್, ಸಂತೋಷ್, ಪ್ರೀನ್ಸ್, ಮಹಾಬಲ ಶೆಟ್ಟಿಗಾರ್, ಸಂತೋಷ್ ದೇವಾಡಿಗ ಹಾಗೂ ಘನಶ್ಯಾಮ್ ಭಾಗವಹಿಸಿದ್ದರು.


