Breaking
2 Aug 2026, Sun

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ತನಿಖೆ: ಚಾರ್ಮಾಡಿ ಘಾಟಿಯಲ್ಲಿ ಎಸ್‌ಐಟಿ ಕಾರು ಪಲ್ಟಿ, ನಾಲ್ವರಿಗೆ ಗಾಯ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಾದಿತ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.

ಅಪಘಾತದಲ್ಲಿ ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಹಾಗೂ ಕಾರಿನ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಿಂದ ಅಧಿಕಾರಿಗಳ ತಂಡ ಚಿಕ್ಕಮಗಳೂರಿಗೆ ತೆರಳುತ್ತಿತ್ತು. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ್ ಅವರನ್ನು ಭೇಟಿ ಮಾಡಿ ತನಿಖೆಯ ಪ್ರಗತಿ ಕುರಿತು ಚರ್ಚಿಸಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಚಾರ್ಮಾಡಿ ಘಾಟ್ ರಸ್ತೆಯ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆಯಲ್ಲೇ ಪಲ್ಟಿಯಾಗಿದ್ದು, ಅಪಘಾತದ ತೀವ್ರತೆಗೆ ವಾಹನ ತಲೆಕೆಳಗಾಗಿದೆ. ಪರಿಣಾಮ ಕಾರಿನಲ್ಲಿದ್ದ ಅಧಿಕಾರಿಗಳಿಗೆ ಗಾಯಗಳಾಗಿವೆ.

ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಧಾವಿಸಿ ಬಂದು ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ರಕ್ಷಣಾ ಕಾರ್ಯ ನಡೆಸಿದರು. ಬಳಿಕ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಾಟಿ ರಸ್ತೆಯಲ್ಲಿ ಸಂಚಾರವನ್ನು ಸುಗಮಗೊಳಿಸಿದ್ದಾರೆ.

Leave a Reply

Your email address will not be published. Required fields are marked *