ಭಟ್ಕಳ: ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದ ವಿರುದ್ಧ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಭಟ್ಕಳ ನಗರ ಠಾಣೆ ಮುಂದೆ ಬುಧವಾರ ರಾತ್ರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಯುವತಿಯನ್ನು ರಕ್ಷಿಸಲು ತೆರಳಿದ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ, ಸಂಬಂಧಿತ ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು ಹಾಗೂ ಕಾರ್ಯಕರ್ತರ ವಿರುದ್ಧ ದಾಖಲಾದ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಇನ್ನೊಂದೆಡೆ, ಮುಸ್ಲಿಂ ಯುವಕ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಕೆಲ ಹಿಂದೂ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದಾನೆ. ಇದೇ ವೇಳೆ ಯುವತಿಯೂ ಸಹ ಯುವಕನ ವಿರುದ್ಧ ದೂರು ನೀಡಿರುವುದಾಗಿ ತಿಳಿದುಬಂದಿದೆ. ಆದರೆ ದೂರಿನ ವಿವರಗಳು ಇನ್ನೂ ಬಹಿರಂಗವಾಗಿಲ್ಲ.
ಪೊಲೀಸ್ ಅಧಿಕಾರಿಗಳು ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರಕರಣದ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸೂಕ್ಷ್ಮ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಟ್ಕಳದಲ್ಲಿ ಹೆಚ್ಚುವರಿ ಭದ್ರತೆ ಮತ್ತು ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.






