ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ದಿನಾಂಕ 16-06-2026ರಂದು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ನಂತರ ಮುಖ್ಯ ಅತಿಥಿಗಳು, ಸಂಚಾಲಕರು, ಪ್ರಾಂಶುಪಾಲರು ಹಾಗೂ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ವಿದ್ಯಾರ್ಥಿ ಪರಿಷತ್ತನ್ನು ಅಧಿಕೃತವಾಗಿ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನಾಯಕತ್ವ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಝೈನ್ ಶೇಖ್ ಜಾಕಿರ್, ಉಪಾಧ್ಯಕ್ಷೆ ಕು. ಸಿಂಚನ ಹಾಗೂ ವಿವಿಧ ವಿಭಾಗಗಳ ಪದಾಧಿಕಾರಿಗಳಿಗೆ ಬ್ಯಾಡ್ಜ್ಗಳನ್ನು ವಿತರಿಸಿ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮೆಲ್ವಿನ್ ವಾಸ್ ಅವರು ನೂತನ ಸದಸ್ಯರಿಗೆ ಕರ್ತವ್ಯನಿಷ್ಠೆ ಹಾಗೂ ಜವಾಬ್ದಾರಿಯುತ ಕಾರ್ಯನಿರ್ವಹಣೆಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಅತೀ ವಂದನೀಯ ಗುರುಗಳಾದ ಐವನ್ ಮೈಕಲ್ ರೊಡ್ರಿಗಸ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿ ಜೀವನವು ಕೇವಲ ಶಿಕ್ಷಣಕ್ಕೆ ಸೀಮಿತವಾಗದೇ ಶಿಸ್ತು, ಸಮಯಪ್ರಜ್ಞೆ, ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಸುವರ್ಣಾವಕಾಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಯಾಂಪಸ್ ನಿರ್ದೇಶಕರೂ ಹಾಗೂ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಆಲ್ವಿನ್ ಸೆರಾವೊ, ಮಿಲಾಗ್ರಿಸ್ ಸಿಬಿಎಸ್ಇ ಶಾಲೆಯ ಪ್ರಾಂಶುಪಾಲರಾದ ಉದಯ ಫೆರ್ನಾಂಡಿಸ್, ಮಿಲಾಗ್ರಿಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಡಿಕ್ಸನ್ ಡಿಸೋಜಾ ಹಾಗೂ ಕಾರ್ಯದರ್ಶಿ ಜಸಿಂತಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಶ್ರೀಮತಿ ಲಿಡ್ವಿನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಣೆ ನಡೆಸಿದರೆ, ಕಾರ್ಯಕ್ರಮದ ಸಂಯೋಜಕಿಯಾದ ಶ್ರೀಮತಿ ಶೆರಿಲ್ ಪಿಂಟೊ ಸ್ವಾಗತಿಸಿದರು. ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಝೈನ್ ಶೇಖ್ ಜಾಕಿರ್ ವಂದನಾರ್ಪಣೆ ಸಲ್ಲಿಸಿದರು.







