ನವದೆಹಲಿ: ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಇವರು, ಇಂಗ್ಲೆಂಡ್ ನ ಕ್ಯಾಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಪದವಿ ಪಡೆದರು.
1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು. 1991ರ ಅಕ್ಟೋಬರ್‍ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.
ತಾವು ಪ್ರಧಾನಿಯಾಗಿದ್ದ ಸಂಧರ್ಭದಲ್ಲಿ ದೇಶದ ಆರ್ಥಿಕ ಸುಧಾರಣೆಗಾಗಿ ದಿಟ್ಟ ಹೆಜ್ಜೆ ಕೈಗೊಳ್ಳುವ ಮೂಲಕ ದೇಶದ ಆರ್ಥಿಕ ಸುಧಾರಣೆಯ ರೂವಾರಿ ಎನಿಸಿದ್ದರು.



