ಬಂಟ್ವಾಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನದಲ್ಲಿ ಅದರ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಪತಂಜಲಿ ಯೋಗ ಶಿಕ್ಷಣ ಸಮಿತಿ ಕೆಲಿಂಜ ಶಾಖೆಯ ಸದಸ್ಯ ರಾಮಣ್ಣ ಮೂಲ್ಯ ಮಾತನಾಡಿ, ಯೋಗದ ಇತಿಹಾಸವು ಸಾವಿರಾರು ವರ್ಷಗಳಷ್ಟು ಹಳೆಯದಾಗಿದ್ದು, ಪತಂಜಲಿ ಅವರು ಯೋಗವನ್ನು ವ್ಯವಸ್ಥಿತ ರೂಪದಲ್ಲಿ ನಿರೂಪಿಸಿದ್ದಾರೆ ಎಂದು ತಿಳಿಸಿದರು. ಯೋಗದಲ್ಲಿ ಆಸನ, ಪ್ರಾಣಾಯಾಮ, ಧ್ಯಾನ ಸೇರಿದಂತೆ ಹಲವು ದೈಹಿಕ ಹಾಗೂ ಮಾನಸಿಕ ಅಭ್ಯಾಸಗಳು ಒಳಗೊಂಡಿದ್ದು, ಯೋಗವು ಕೇವಲ ವ್ಯಾಯಾಮವಲ್ಲ; ಅದು ಆರೋಗ್ಯ ಮತ್ತು ಮಾನಸಿಕ ನೆಮ್ಮದಿಯನ್ನು ನೀಡುವ ಜೀವನ ಪದ್ಧತಿಯಾಗಿದೆ ಎಂದು ಹೇಳಿದರು. ನಿಯಮಿತ ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಹಾಗೂ ಸಂತೋಷದ ಜೀವನ ಸಾಧ್ಯವಾಗುತ್ತದೆ ಎಂದರು.

ಬಳಿಕ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೆಲಿಂಜ ಶಾಖೆಯ ಸದಸ್ಯರಾದ ಕುಸುಮ ಶೆಟ್ಟಿ ಹಾಗೂ ತೇಜಾಕ್ಷಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಯೋಗ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ್ ಹಾಗೂ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಇಂದು ಶೇಖರ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.


