Breaking
25 Sep 2026, Fri

ಉಡುಪಿ: ಸರಣಿ ಅಪರಾಧ ಪ್ರಕರಣಗಳು: ಗೂಂಡಾ ಕಾಯ್ದೆಯಡಿ ಚರಣ್ ರಾಜ್ ಸೆರೆ

ಉಡುಪಿ: ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿಶೀಟರ್ ಚರಣ್ ರಾಜ್ (29) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಭಂಡಾರ್ ಹೌಸ್ ನಿವಾಸಿಯಾಗಿರುವ ಚರಣ್ ರಾಜ್ ವಿರುದ್ಧ ಬಂಟ್ವಾಳ ಗ್ರಾಮಾಂತರ, ಸುರತ್ಕಲ್, ಮಂಗಳೂರು ಪೂರ್ವ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ಕೊಲೆ ಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲಿನ ದೌರ್ಜನ್ಯ, ಮಾದಕ ವಸ್ತುಗಳ ಸೇವನೆ ಹಾಗೂ ಸಾಗಾಟ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಈತನ ಹೆಸರು ಕೇಳಿಬಂದಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ ವರದಿಯ ಮೇರೆಗೆ ಜಿಲ್ಲಾಧಿಕಾರಿ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ ನೀಡಿದ್ದು, ಅದರಂತೆ ಜೂನ್ 24ರಂದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ದಾಖಲಾದ ಪ್ರಕರಣಗಳಲ್ಲಿ ಮೂರು ಪ್ರಕರಣಗಳಲ್ಲಿ ದೋಷ ಸಾಬೀತಾಗಿದ್ದು, ನಾಲ್ಕು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ.

ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆರೋಪಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *