ಮಂಗಳೂರು: ಸುರತ್ಕಲ್ ವ್ಯಾಪ್ತಿಯಲ್ಲಿ 17 ವರ್ಷದ ಗರ್ಭಿಣಿ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಪೋಷಕರ ದೂರಿನ ಮೇರೆಗೆ ಆರೋಪಿಯಾಗಿರುವ ಅನೀಶ್ ಪೂಜಾರಿ ವಿರುದ್ಧ ಪೋಕ್ಸೋ ಕಾಯ್ದೆ, ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳಡಿ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೃತ ಬಾಲಕಿಯ ಗುರುತನ್ನು ಗೌಪ್ಯವಾಗಿಡಲಾಗಿದೆ. ಆತ್ಮಹತ್ಯೆಗೆ ಮುನ್ನ ಬಾಲಕಿ ತನ್ನ ಪೋಷಕರಿಗೆ ಪತ್ರವೊಂದನ್ನು ಬರೆದಿಟ್ಟು ಹೋಗಿದ್ದಾಳೆ ಎನ್ನಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಪತ್ರದಲ್ಲಿ ತನ್ನ ಜೀವನದ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿರುವ ಬಾಲಕಿ, ಆರೋಪಿಯು ತನ್ನ ಸಂಕಷ್ಟದ ಸಂದರ್ಭದಲ್ಲಿ ನೆರವಾಗಲಿಲ್ಲ ಎಂದು ಉಲ್ಲೇಖಿಸಿದ್ದಾಳೆ. ಅಲ್ಲದೆ, ಆರೋಪಿಯು ತಾನು ಗುರುತಿಸಿಕೊಂಡಿದ್ದ ಸಂಘಟನೆಗಳೂ ಸಹಾಯಕ್ಕೆ ಬರಲಿಲ್ಲ ಎಂಬ ನೋವನ್ನು ವ್ಯಕ್ತಪಡಿಸಿದ್ದಾಳೆ ಎಂದು ತಿಳಿದುಬಂದಿದೆ.

ಮೃತಳ ಪೋಷಕರು ನೀಡಿದ ದೂರಿನಲ್ಲಿ, ಮದುವೆಯಾಗುವುದಾಗಿ ನಂಬಿಸಿ ಆರೋಪಿಯು ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆಕೆ ಗರ್ಭಿಣಿಯಾಗಿದ್ದಳು ಎಂದು ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಅನೀಶ್ ಪೂಜಾರಿ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಮರಣೋತ್ತರ ಪರೀಕ್ಷೆ ವೇಳೆ ವೈದ್ಯರು ಭ್ರೂಣದ ಮಾದರಿಯನ್ನು ಸಂಗ್ರಹಿಸಿ ಡಿಎನ್‌ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಯು ಸದ್ಯ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.


