ಉಡುಪಿ: ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬ್ರಹ್ಮಾವರದ ಆಕಾಶವಾಣಿ ಸಮೀಪದ ಸ್ವರ್ಣ ರೆಸಿಡೆನ್ಸಿಯಲ್ಲಿ ವಾಸಿಸುತ್ತಿದ್ದ, ಮೂಲತಃ ಶಿರೂರಿನ ಮುಸ್ಲಿಂ ಮೊಹಲ್ಲಾದ ಜೆ.ಎಂ. ಕ್ರಾಸ್ರೋಡ್ ನಿವಾಸಿ ಸೈಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ.

ಉಡುಪಿ ಉಪ ವಿಭಾಗದ ಪೊಲೀಸ್ ಅಧಿಕಾರಿ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡವು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದೆ.

ಕಾರ್ಯಾಚರಣೆಯ ವೇಳೆ ಆರೋಪಿಯಿಂದ 1.03 ಗ್ರಾಂ ಎಂಡಿಎಂಎ, ಮಾದಕ ದ್ರವ್ಯ ಸಾಗಾಟಕ್ಕೆ ಬಳಸುತ್ತಿದ್ದ ಸ್ಕೂಟರ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಒಟ್ಟು ಸೊತ್ತಿನ ಮೌಲ್ಯ ಸುಮಾರು ₹1.52 ಲಕ್ಷ ಎಂದು ಅಂದಾಜಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಯು ಕಾಪು, ಬ್ರಹ್ಮಾವರ, ಉಡುಪಿ ಮತ್ತು ಮಣಿಪಾಲ ಭಾಗದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


