ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂವರು ರೌಡಿ ಶೀಟರ್‌ಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ದಾನೀಶ್ ಮದನಿ (23), ಕಾವ್ರಾಡಿ ಗ್ರಾಮದ ಕಂಡ್ಲೂರು ನಿವಾಸಿ ಕರಾಣಿ ಮುಸೀನ್ (44) ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿಯ ಇಲಿಯಾಸ್ (36) ವಿರುದ್ಧ ಜೂನ್ 24ರಂದು ಗಡಿಪಾರು ಆದೇಶ ಜಾರಿಯಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ದಾನೀಶ್ ಮದನಿ ವಿರುದ್ಧ 8 ಪ್ರಕರಣಗಳು ದಾಖಲಾಗಿದ್ದು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಕರಾಣಿ ಮುಸೀನ್ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು ಅವರ ಮೇಲೂ ರೌಡಿ ಶೀಟರ್ ತೆರೆಯಲಾಗಿದೆ. ಇಲಿಯಾಸ್ ವಿರುದ್ಧ 15 ಪ್ರಕರಣಗಳು ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ.

ಈ ಮೂವರು ಆರೋಪಿಗಳು ಕೊಲೆ, ಕೊಲೆಯತ್ನ, ಪೊಲೀಸ್ ಠಾಣೆಗೆ ಕಲ್ಲೆಸೆತ, ಕಳವು, ಜಾನುವಾರು ಕಳವು, ಜಾನುವಾರು ಹತ್ಯೆ ಹಾಗೂ ರೌಡಿಸಂ ಪ್ರವೃತ್ತಿಯ ಹಲ್ಲೆ ಸೇರಿದಂತೆ ಒಟ್ಟು 30 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


