ಬೆಳ್ತಂಗಡಿ: ಮಾದಕ ದ್ರವ್ಯ ಜೀವನವನ್ನು ಹಾಳು ಮಾಡುತ್ತದೆ. ಸ್ನೇಹಿತರು ಮಾದಕ ವ್ಯಸನಕ್ಕೆ ತುತ್ತಾದರೆ ಶಿಕ್ಷಕರಿಗೆ ತಿಳಿಯದೇ ಇರಬಹುದು, ಆದರೆ ಸ್ನೇಹಿತರು ವ್ಯಸನಕ್ಕೆ ಬಲಿಯಾಗದಂತೆ ತಕ್ಷಣ ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬೆಳ್ತಂಗಡಿ ಉಪ ವಿಭಾಗ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ವತಿಯಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಜೂನ್ 23ರಂದು ಆಯೋಜಿಸಿದ್ದ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯು “ಸಂಗಮಿತ್ರ” ಎಂಬ ಸ್ಕ್ಯಾನರ್ ತಂತ್ರಜ್ಞಾನವನ್ನು ಬಳಸುತ್ತಿದ್ದು, ಇದರ ಮೂಲಕ ಮಾದಕ ವ್ಯಸನಿಗಳ ಬಗ್ಗೆ ನಿಖರ ಮಾಹಿತಿ ಪಡೆಯಲು ಸಾಧ್ಯವಾಗುತ್ತದೆ. ಅಂತಹವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವೂ ನಡೆಯುತ್ತಿದೆ ಎಂದು ತಿಳಿಸಿದರು.

ಹೆತ್ತವರು ಕಷ್ಟಪಟ್ಟು ಮಕ್ಕಳಿಗೆ ಶಿಕ್ಷಣ ನೀಡುತ್ತಾರೆ. ಆದ್ದರಿಂದ ಯಾವುದೇ ರೀತಿಯ ಮಾದಕ ದ್ರವ್ಯಗಳಿಂದ ದೂರವಿದ್ದು, ಓದಿನತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮಾದಕ ದ್ರವ್ಯಗಳ ಕುರಿತು ಮಾಹಿತಿ ದೊರೆತಲ್ಲಿ ಚೈಲ್ಡ್ ಹೆಲ್ಪ್ಲೈನ್ 1098 ಅಥವಾ ತುರ್ತು ಸೇವೆ 112ಗೆ ಕರೆ ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ವತ್ ಪಿಯು ಕಾಲೇಜಿನ ಕಾರ್ಯದರ್ಶಿ ಪ್ರಜ್ವಲ್ ರೈ ವಹಿಸಿದ್ದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಉಪ ವಿಭಾಗ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್., ಪೊಲೀಸ್ ಉಪನಿರೀಕ್ಷಕ ಆನಂದ್ ಎಂ., ವಿದ್ವತ್ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ನಾಯ್ಕ್ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಅನುಶ್ರೀ ಉಪಸ್ಥಿತರಿದ್ದರು.
ಉಪನ್ಯಾಸಕ ಅಜಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


