ಬಂಟ್ವಾಳ: ರಾಷ್ಟ್ರೀಯ ಮಾನವ ಹಕ್ಕು, ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಪೆರಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಸಂಸ್ಥೆಯ ಜಿಲ್ಲಾಧ್ಯಕ್ಷ ಸಚಿದಾನಂದ ರೈ ಪಾಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು.
ಸರ್ಕಾರಿ ಶಾಲೆ ಉಳಿಸಿ, ಬೆಳೆಸೋಣ ಎಂಬ ಧ್ಯೇಯದೊಂದಿಗೆ ಶಾಲಾಭಿವೃದ್ಧಿ ಸಮಿತಿಯನ್ನು ರಚಿಸಲಾಗಿದ್ದು, ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ ಅವರ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಶಾಲಾ ವಾಹನ ಹಾಗೂ ಸಮವಸ್ತ್ರದ ವ್ಯವಸ್ಥೆ ಕಲ್ಪಿಸಲಾಗಿದೆ.

ಸ್ಥಳೀಯರ ಸಹಕಾರದೊಂದಿಗೆ ಸಾಮಾಜಿಕ ಕಾರ್ಯಕರ್ತ ಕುಶಲ ಎಂ. ಅವರ ನೇತೃತ್ವದಲ್ಲಿ ಒಂದರಿಂದ ಏಳನೇ ತರಗತಿಯವರೆಗೆ ಹೊಸ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವ ಕಾರ್ಯ ಕೈಗೊಳ್ಳಲಾಗಿದ್ದು, ಶಾಲೆಗೆ ಅಗತ್ಯವಿರುವ ಶಿಕ್ಷಕರ ನೇಮಕ, ಶೌಚಾಲಯ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾನವ ಹಕ್ಕು ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷ ಜಯಾನಂದ ಪೆರಾಜೆ, ಮಕ್ಕಳ ಶಿಕ್ಷಣದಲ್ಲಿ ಶಿಕ್ಷಕರು ಹಾಗೂ ಪೋಷಕರ ಜವಾಬ್ದಾರಿಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಡಾ. ಶ್ರೀನಾಥ ಆಳ್ವ, ಜಯರಾಮ ರೈ ಪೆರಾಜೆಗುತ್ತು, ರವೀಂದ್ರ ರೈ, ಚಂದ್ರಹಾಸ ಶೆಟ್ಟಿ ಬುಡೋಳಿಗುತ್ತು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಝೀನತ್, ಮುಖ್ಯ ಶಿಕ್ಷಕಿ ರೂಪ ಹಾಗೂ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.






