ಜೈಪುರ: ರಾಜಸ್ಥಾನದ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ಮಂಗಳವಾರ (ಜೂನ್ 30) ರಾತ್ರಿ 39 ಮಂದಿ ಪ್ರಯಾಣಿಕರಿದ್ದ ಬಸ್ ಉತ್ತರಾಖಂಡದ ಹರಿದ್ವಾರದಿಂದ ಇಂದೋರ್ಗೆ ತೆರಳುತ್ತಿತ್ತು. ಈ ವೇಳೆ ಕೊಲಾವಾ ಪೊಲೀಸ್ ಠಾಣೆ ವ್ಯಾಪ್ತಿಯ ದ್ವಾರಪುರ ಗ್ರಾಮದ ಬಳಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಏಳು ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಬಸ್ಸಿನಲ್ಲಿದ್ದ ಹೆಚ್ಚಿನ ಪ್ರಯಾಣಿಕರು ಮಧ್ಯಪ್ರದೇಶದ ನಿವಾಸಿಗಳಾಗಿದ್ದಾರೆ. ಘಟನೆ ತಿಳಿದ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೌಸಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ದೀಕ್ಷಿತ್ ಮಾಹಿತಿ ನೀಡಿದ್ದು, ಬೆಂಕಿ ಅವಘಡದಲ್ಲಿ ಐವರು ಸಜೀವ ದಹನಗೊಂಡಿದ್ದು, ಇನ್ನಿಬ್ಬರು ತಲೆಗೆ ತೀವ್ರ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಋಷಿಕೇಶ್ದಿಂದ ಇಂದೋರ್ಗೆ ತೆರಳುತ್ತಿದ್ದ ಈ ಬಸ್ ಅನ್ನು ಹ್ಯಾನ್ಸ್ ಟ್ರಾವೆಲ್ಸ್ ಸಂಸ್ಥೆ ನಿರ್ವಹಿಸುತ್ತಿತ್ತು.

ಅಪಘಾತದಿಂದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಯಿತು. ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗಲು ಪೊಲೀಸರು ವಾಹನಗಳನ್ನು ಪರ್ಯಾಯ ಮಾರ್ಗಗಳಿಗೆ ತಿರುಗಿಸಿದರು. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.



