ಮಂಗಳೂರು: ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸುಲು ವಿ. ಎಂದು ಗುರುತಿಸಲಾಗಿದೆ.

ಈತ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ್ ಹಾಗೂ ಚರಣ್ ರಾಜ್ ಅವರು ಜೂನ್ 30ರಂದು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಜುಲೈ 1ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.







