Breaking
2 Jul 2026, Thu

ಬೆಂಗಳೂರು: ಕಲ್ಲುಕ್ವಾರಿಯಲ್ಲಿ ಬಂಡೆ ಉರುಳಿ ದುರಂತ; 7 ಕಾರ್ಮಿಕರ ದುರ್ಮರಣ, 5 ಮಂದಿಗೆ ಗಂಭೀರ ಗಾಯ

ಬೆಂಗಳೂರು: ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಬಿದ್ದ ಪರಿಣಾಮ ಅದರಡಿ ಸಿಲುಕಿ 7 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ಜುಲೈ 2ರ ಗುರುವಾರ ಮುಂಜಾನೆ ನಡೆದಿದೆ.

ಬೆಳಿಗ್ಗೆ ಸುಮಾರು 5 ಗಂಟೆ ಸುಮಾರಿಗೆ ದುರಂತ ಸಂಭವಿಸಿದೆ. ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆ ಉರುಳಿ ಬಿದ್ದ ಪರಿಣಾಮ ಭಾರೀ ಸಾವುನೋವು ಸಂಭವಿಸಿದೆ. ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

ಕಾವೇರಿ ಕ್ರಷರ್‌ನಲ್ಲಿ ಈ ಅವಘಡ ಸಂಭವಿಸಿದ್ದು, ಘಟನೆ ವೇಳೆ 10ರಿಂದ 15 ಮಂದಿ ಬಿಹಾರ ಮೂಲದ ಕಾರ್ಮಿಕರು ಹಾಗೂ 2ರಿಂದ 3 ಮಂದಿ ಸ್ಥಳೀಯರು ಕೆಲಸ ಮಾಡುತ್ತಿದ್ದರು. ಹಿಟಾಚಿ ಯಂತ್ರದ ಮೂಲಕ ಕಾಮಗಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಬಂಡೆ ಕುಸಿದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ದುರಂತದಲ್ಲಿ 5 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಾವರೆಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಕ್ವಾರಿ ಮಾಲೀಕ ಆನಂದ ಸ್ವಾಮಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *