Breaking
21 Aug 2026, Fri

ಉಪ್ಪಿನಂಗಡಿ: ಮನೆಯಲ್ಲಿ ಅಗ್ನಿ ಅವಘಡ; ₹3 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ

ಉಪ್ಪಿನಂಗಡಿ: ಇಲ್ಲಿನ ಮಠ ನಿವಾಸಿ ಆದಂ ಅವರ ಮನೆಯಲ್ಲಿ ಬುಧವಾರ ಸಂಜೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿ ಅವಘಡದಲ್ಲಿ ಮನೆಯಲ್ಲಿದ್ದ ಟಿ.ವಿ., ವಿವಿಧ ವಿದ್ಯುತ್ ಉಪಕರಣಗಳು, ಕಪಾಟು, ಬಟ್ಟೆಗಳು, ಅಗತ್ಯ ದಾಖಲೆ ಪತ್ರಗಳು ಹಾಗೂ ವಿದ್ಯುತ್ ಸಂಪರ್ಕದ ವೈರ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಿಂದ ಸುಮಾರು ₹3 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಅವಘಡ ಸಂಭವಿಸಿದ ವೇಳೆ ಮನೆಯ ಮಾಲೀಕ ಆದಂ ಅವರು ಪತ್ನಿಯನ್ನು ಔಷಧಿಗಾಗಿ ಉಪ್ಪಿನಂಗಡಿಗೆ ಕರೆದುಕೊಂಡು ಹೋಗಿದ್ದು, ಅವರೊಂದಿಗೆ ಪುತ್ರಿಯೂ ತೆರಳಿದ್ದರು. ಈ ವೇಳೆ ಶಾಲೆಯಿಂದ ಮನೆಗೆ ಬಂದಿದ್ದ ಮೊಮ್ಮಕ್ಕಳು ಮಾತ್ರ ಮನೆಯಲ್ಲಿದ್ದರು.

ಮನೆಯೊಳಗೆ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡ ತಕ್ಷಣ ಮಕ್ಕಳು ಪಕ್ಕದ ಮನೆಯವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳೀಯರು ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದ ಪರಿಣಾಮ ಮತ್ತಷ್ಟು ಅನಾಹುತ ತಪ್ಪಿತು. ಆದರೆ ಅಷ್ಟರಲ್ಲೇ ಮನೆಯೊಳಗಿನ ಬಹುತೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದವು. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

Leave a Reply

Your email address will not be published. Required fields are marked *