ಉತ್ತರ ಪ್ರದೇಶ: ಸಹಾರನ್‌ಪುರ ಜಿಲ್ಲೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಕೇರಳ ಮೂಲದ ಯುವಕ ಹಾಗೂ ಉತ್ತರ ಪ್ರದೇಶದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜು.1ರ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ.

ಎಸ್‌ಬಿಐ ಕಾಲೋನಿಯ ತಿರಂಗಾ ಚೌಕ್ ಸಮೀಪದ ಬಾಡಿಗೆ ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿದ್ದರಿಂದ ಸ್ಥಳೀಯರಿಗೆ ಅನುಮಾನ ಮೂಡಿದೆ. ಹಲವು ಬಾರಿ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಿಟಕಿಯಿಂದ ಒಳಗೆ ಪರಿಶೀಲಿಸಿದಾಗ ಇಬ್ಬರೂ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿದೆ. ಬಳಿಕ ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಯುವಕ ಮತ್ತು ಯುವತಿಯ ಮೃತದೇಹಗಳು ಪತ್ತೆಯಾಗಿವೆ.

ಮೃತ ಯುವಕ ಕೇರಳ ಮೂಲದವನಾಗಿದ್ದು, ಸಹಾರನ್‌ಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಮೃತ ಯುವತಿ ಸ್ಥಳೀಯ ಗಾಗಲ್‌ಹೇಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ವಿಧಿವಿಜ್ಞಾನ ತಜ್ಞರ ತಂಡ ಸ್ಥಳದಿಂದ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಮೃತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಸ್ಥಳೀಯರನ್ನು ವಿಚಾರಣೆ ನಡೆಸಲಾಗುತ್ತಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಇದು ಪ್ರೇಮ ಪ್ರಕರಣಕ್ಕೆ ಸಂಬಂಧಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಯುವಕ ಮೊದಲು ತನ್ನ ಮಣಿಕಟ್ಟಿನ ನರ ಕತ್ತರಿಸಿಕೊಂಡು ಬಳಿಕ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ಸಾಧ್ಯತೆ ಇದೆ. ಯುವತಿ ವಿಷಪೂರಿತ ಪದಾರ್ಥ ಸೇವಿಸಿ ಮೃತಪಟ್ಟಿರಬಹುದು ಎಂದು ಪೊಲೀಸ್ ಅಧಿಕಾರಿ ಯಾದವ್ ತಿಳಿಸಿದ್ದಾರೆ.

ಆದರೆ, ಘಟನೆಯ ನಿಖರ ಕಾರಣ ಮರಣೋತ್ತರ ಪರೀಕ್ಷೆ, ವಿಧಿವಿಜ್ಞಾನ ವರದಿ ಹಾಗೂ ಮೊಬೈಲ್‌ಗಳ ಪರಿಶೀಲನೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.




