Breaking
4 Jul 2026, Sat

ಜನಸ್ಪಂದನಕ್ಕೆ ರಾಜ್ಯ ಸರ್ಕಾರ ಹೊಸ ಚುರುಕು: ಪ್ರತಿ ವಾರ ಜಿಲ್ಲಾ–ತಾಲೂಕು–ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮ ಕಡ್ಡಾಯ

ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಹಾಗೂ ಆಡಳಿತ ಯಂತ್ರವನ್ನು ಇನ್ನಷ್ಟು ಚುರುಕುಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇದರಂತೆ ಪ್ರತಿ ವಾರ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ಕಡ್ಡಾಯವಾಗಿ ನಡೆಸುವಂತೆ ಸೂಚಿಸಲಾಗಿದೆ.

ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಬೋಧ್ ಯಾದವ್ ಅವರು ಹೊರಡಿಸಿರುವ ಆದೇಶದ ಪ್ರಕಾರ, ಹೋಬಳಿ ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು.

ಜನಸ್ಪಂದನ ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ ಎಲ್ಲಾ ಅರ್ಜಿಗಳನ್ನು ಅದೇ ದಿನ ಸರ್ಕಾರದ ಅಧಿಕೃತ ಪೋರ್ಟಲ್‌ಗೆ ಅಪ್‌ಲೋಡ್ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದೇ ವೇಳೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪ್ರತಿ ತಿಂಗಳು ಕನಿಷ್ಠ ಎರಡು ಬಾರಿ ಸಂಬಂಧಿತ ಜಿಲ್ಲೆಗಳಿಗೆ ಭೇಟಿ ನೀಡಿ, ಆ ಸಂದರ್ಭದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ.

ಈ ಕ್ರಮದಿಂದ ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ದೊರೆಯುವ ಜೊತೆಗೆ ಆಡಳಿತ ವ್ಯವಸ್ಥೆಯ ಕಾರ್ಯಕ್ಷಮತೆ ಇನ್ನಷ್ಟು ಸುಧಾರಿಸುವ ನಿರೀಕ್ಷೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *