ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಠಾಣೆ ಪೊಲೀಸರು ಜುಲೈ 3ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬಂಧಿತ ಆರೋಪಿಯನ್ನು ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಜುಬೈರ್ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಈ ಪ್ರಕರಣವು ಮಾಹಿತಿ ತಂತ್ರಜ್ಞಾನ ಕಾಯ್ದೆ-2008ರ 66(C), 66(D) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 126(2), 308(6), 318(4), 319(2) ಮತ್ತು 3(5) ಅಡಿಯಲ್ಲಿ ದಾಖಲಾಗಿದೆ.

ಆರೋಪಿಯು ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಮೂಲಕ ಬಂದ ಹಣದ ವಹಿವಾಟಿಗೆ ಸಹಕರಿಸುವ ಮೂಲಕ ಅಪರಾಧಕ್ಕೆ ನೆರವಾಗಿದ್ದಾನೆ ಎಂದು ಆರೋಪಿಸಲಾಗಿದೆ.

ವಿಚಾರಣೆ ವೇಳೆ, ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ (ಅ.ಕ್ರ.180/2022) ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಇದಲ್ಲದೆ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಬಂಧಿಸಲಾಗಿದ್ದು, ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.




