ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಮತ್ತು ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ದಾಳಿ ನಡೆಸಿದ ವೇಳೆ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಗಣಿಗಾರಿಕೆಗೆ ಬಳಸುತ್ತಿದ್ದ ವಿವಿಧ ಯಂತ್ರೋಪಕರಣಗಳನ್ನೂ ಪೊಲೀಸರು ಪತ್ತೆಹಚ್ಚಿದ್ದಾರೆ.

ಇದೇ ವೇಳೆ ಅಕ್ರಮ ಮಣ್ಣು ಗಣಿಗಾರಿಕೆ ಕೂಡ ನಡೆಯುತ್ತಿರುವುದು ಪತ್ತೆಯಾಗಿದ್ದು, ಲಾರಿಗಳ ತೂಕ ಪರಿಶೀಲನೆಗಾಗಿ ಬಳಸುತ್ತಿದ್ದ ವೇ ಬ್ರಿಡ್ಜ್ ಹಾಗೂ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೂ ಅಧಿಕಾರಿಗಳ ಗಮನಕ್ಕೆ ಬಂದಿದೆ. ಸ್ಥಳದಲ್ಲಿದ್ದ ಯಂತ್ರೋಪಕರಣಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಎಲ್ಲಾ ಸೊತ್ತುಗಳನ್ನು ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಯಾವುದೇ ಪರವಾನಗಿ ಇಲ್ಲದೆ ಗಣಿಗಾರಿಕೆ ನಡೆಸುತ್ತಿದ್ದ ಆರೋಪದಡಿ ಮುಳಿಗದ್ದೆ ಝಕಾರಿಯಾ ಹಾಗೂ ಇತರರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.



