ಚಿಕ್ಕಬಳ್ಳಾಪುರ: ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಹೊರವಲಯದ ಮುದ್ದೇನಹಳ್ಳಿಯ ವಿಟಿಯು ಕಾಲೇಜು ಸಮೀಪ ಜು. 4ರ ಶನಿವಾರ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಕೂರ್ಲಳ್ಳಿ ಗ್ರಾಮದಿಂದ ಚಿಕ್ಕಬಳ್ಳಾಪುರ ನಗರಕ್ಕೆ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಕಂದಕಕ್ಕೆ ಪಲ್ಟಿಯಾಗಿದೆ.

ಬಸ್ಸಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಮಾರ್ಗಕ್ಕೆ ಚಾಲಕ ಹೊಸಬನಾಗಿದ್ದು, ಅತಿ ವೇಗದಿಂದ ಬಸ್ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.




