ಉಡುಪಿ: ನಗರದ ಹಳೆ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಸಾರ್ವಜನಿಕರ ನಿಖರ ಮಾಹಿತಿಯ ಮೇರೆಗೆ ನಗರ ಪೊಲೀಸ್ ಠಾಣೆ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಿ, 4 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಬಾಗಲಕೋಟೆ ಮೂಲದ ಕಂಟ್ಯಪ್ಪ ಮೇಥಿ (32) ಎಂದು ಗುರುತಿಸಲಾಗಿದೆ.
ಆರೋಪಿ ಸ್ಕೂಟರ್‌ನಲ್ಲಿ ಬಂದು ಸಿಟಿ ಬಸ್ ನಿಲ್ದಾಣದಲ್ಲಿ ಮದ್ಯದ ಪೊಟ್ಟಣಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದರು. ಬಳಿಕ ತಪಾಸಣೆ ನಡೆಸಿದಾಗ 4 ಲೀಟರ್ ಮದ್ಯ ಪತ್ತೆಯಾಗಿದೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಈ ಕಾರ್ಯಾಚರಣೆಯನ್ನು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಹಾಗೂ ಉಪನಿರೀಕ್ಷಕ ಭರತೇಶ್ ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ಮುಖ್ಯ ಆರಕ್ಷಕ ಬಶೀರ್ ಭಾಗವಹಿಸಿದ್ದರು. ಕಾರ್ಯಾಚರಣೆಗೆ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರು ಸಹಕಾರ ಪಡೆದುಕೊಂಡಿದ್ದರು.



